ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಹೋಮ್ ಪೇಜ್
ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಖಡನ್ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಜೊತೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅವರು ಸೂಚನೆ ನೀಡಿದರು.
ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸಿಎಂ ಸೂಚನೆ ನೀಡಿದರು.
ಜಾತಿ ದೌರ್ಜನ್ಯ ಪ್ರಕತಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸೂಚನೆ ನೀಡಿದರು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ ಶೇ 3ಕ್ಕಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು ಡಿಸಿಎಆರ್ಇ ಸೆಲ್ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ ಎಂದರು.
ಕೌಂಟರ್ ಕೇಸ್ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಮುಖ್ಯ ಕಾರ್ಯದರ್ಶಿಗಳು, 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ. ಬಳಿಕ ಈ ಬಗ್ಗೆ ಕ್ರಮ ಕೈಗೊಂಡು ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವಂತೆ ಮಾಡುವ ದಿಸೆಯಲ್ಲಿ ಗಮನ ಹರಿಸುವುದಾಗಿ ತಿಳಿಸಿದರು.
ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಿದರು. ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು, ದೇವದಾಸಿ ಮಹಿಳೆಯರ ಸ್ಥಿತಿ ಗತಿ ಬಗ್ಗೆ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ. ಈ ವಿಚಾರವಾಗಿ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ದೇವದಾಸಿ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದರು.
ಸಭೆಯಲ್ಲಿ ಸಚಿವರಾದ ಹೆಚ್ಸಿ ಮಹದೇವಪ್ಪ, ಕೆಎನ್ ರಾಜಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಸ್ಸಿ ಎಸ್ಟಿ ಸಮುದಾಯದ ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು